ಸ್ಪೀಕರ್ ಯು.ಟಿ.ಖಾದರ್ ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ UT KHADAR


ಬೆಂಗಳೂರು: ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸಹಿತ ಮೂರು ಮಂದಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಿದೆ.

ಅಕ್ಟೋಬರ್ 8 ರಂದು ನಡೆಯುವ ವಿವಿಯ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸ್ಪೀಕರ್ ಯು ಟಿ ಖಾದರ್, ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಬಿ. ಪ್ರಸನ್ನ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಬುಧವಾರ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ವಿವಿ ಕುಲಪತಿ ಎಸ್.ಎಂ. ಜಯಕರ್ ತಿಳಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಭಾಗವಹಿಸುವ ಡಿ.ಆರ್.ಡಿ.ಎಲ್. ನಿವೃತ್ತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ. ಪ್ರಹ್ಲಾದ ರಾಮರಾವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
Next Post Previous Post