ಕರ್ನಾಟಕದಾದ್ಯಂತ ನಾಳೆಯಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ National Pulse Polio Programme karnataka


ಬೆಂಗಳೂರು: ದೇಶವನ್ನು ಪೋಲಿಯೋ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ (Karnataka) ನಾಳೆಯಿಂದ ಡಿ. 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ-2025 (National Pulse Polio Programme) ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ ಮಗುವಿನ ಭವಿಷ್ಯವನ್ನು ನಿರ್ಧರಿಸಲಿದೆ ಎಂಬ ಘೋಷವಾಕ್ಯದಡಿ ಸರ್ಕಾರ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕರ್ನಾಟಕ ಆರೋಗ್ಯ ಇಲಾಖೆ ಟ್ವೀಟ್


ಹತ್ತಿರದ ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಬಸ್​​​, ರೆಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಬಳಿಕ ಎರಡು ದಿನ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ನೀಡುತ್ತಾರೆ.

ಜಿಬಿಎಗೆ 11 ಲಕ್ಷಕ್ಕೂ ಹೆಚ್ಚು ಲಸಿಕೆ ಹಾಕಿಸುವ ಗುರಿ ನೀಡಿದ ಆರೋಗ್ಯ ಇಲಾಖೆ 

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ತನ್ನ ಐದು ನಿಗಮಗಳ ಮೂಲಕ ಒಟ್ಟು 11,34,988 ಮಕ್ಕಳಿಗೆ ಲಸಿಕೆ ಹಾಕುವ ಗುರಿ ನೀಡಿದೆ.

ಇನ್ನು ಈ ಕುರಿತಾಗಿ ಟ್ವೀಟ್​ ಮಾಡಿರುವ ಜಿಬಿಎ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ-2025 ಅನ್ನು ಡಿಸೆಂಬರ್ 21ರಿಂದ 24, 2025ರವರೆಗೆ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮನವಿ ಮಾಡಿದೆ.

ಜಿಬಿಎ ಟ್ವೀಟ್​


ಜೀವದ ಎರಡು ಹನಿಗಳಿಂದ ಪೋಲಿಯೋ ವಿರುದ್ಧ ವಿಜಯ ಸಾಧಿಸುವುದನ್ನು ಮುಂದುವರಿಸೋಣ. ನಿಮ್ಮ ಹತ್ತಿರದ ಪೋಲಿಯೋ ಬೂತ್, ಯುಪಿಎಚ್‌ಸಿ ಹಾಗೂ ನಮ್ಮ ಕ್ಲಿನಿಕ್‌ಗಳ ಮಾಹಿತಿ ಪಡೆಯಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ಅಥವಾ https://gba.karnataka.gov.in/polio/ ಭೇಟಿ ನೀಡಬಹುದಾಗಿದೆ.


Next Post Previous Post