BREAKING: ಭಾರಿ ಮಳೆ: ನಾಳೆ (ಜುಲೈ 2) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ (ಜುಲೈ 2, ಗುರುವಾರ) ಜಿಲ್ಲೆಯ ಪಿಯುಸಿ ವರೆಗಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ.
ಸುರಕ್ಷತೆಗೆ ಆದ್ಯತೆ: ವಿದ್ಯಾರ್ಥಿಗಳ ಸುರಕ್ಷತೆಯನ್ನು ಅತ್ಯಂತ ಆದ್ಯತೆಯಾಗಿ ಪರಿಗಣಿಸಿ ಜಿಲ್ಲಾಡಳಿತವು ಈ ಮಹತ್ವದ ಕ್ರಮ ಕೈಗೊಂಡಿದೆ.
ಸಾರ್ವಜನಿಕರಿಗೆ ಮನವಿ: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತವು ವಿನಂತಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಮಳೆಯ ಪರಿಸ್ಥಿತಿಯನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಸ್ಥಳೀಯ ಆಡಳಿತ ನೀಡುವ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು
ದಿನಾಂಕ: 01.07.2026
ವಿಷಯ: ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳು ಮತ್ತು ತುರ್ತು ಆದೇಶ.
భಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, "ರೆಡ್ ಅಲರ್ಟ್" (Red Alert) ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಕೆಳಗಿನ ತುರ್ತು ಕ್ರಮಗಳನ್ನು ಕೈಗೊಂಡಿದೆ:
ಪ್ರಮುಖ ಆದೇಶಗಳು ಮತ್ತು ಮಾರ್ಗಸೂಚಿಗಳು:
- ಶಾಲಾ-ಕಾಲೇಜುಗಳಿಗೆ ರಜೆ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ದಿನಾಂಕ: 02.07.2026 ರಂದು ರಜೆಯನ್ನು ಘೋಷಿಸಲಾಗಿದೆ.
- ಪಾಲಕರಿಗೆ ಸೂಚನೆ: ನೀರು ತುಂಬಿರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಕಡ್ಡಾಯವಾಗಿ ಜಾಗ್ರತೆ ವಹಿಸಬೇಕು.
- ಮೀನುಗಾರರಿಗೆ ಎಚ್ಚರಿಕೆ: ಯಾವುದೇ ಕಾರಣಕ್ಕೂ ಮೀನುಗಾರರು ಈ ಸಮಯದಲ್ಲಿ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
- ಅಧಿಕಾರಿಗಳ ಉಪಸ್ಥಿತಿ: ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುತ್ತಾ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
- ಪ್ರವಾಸಿಗರಿಗೆ ನಿರ್ಬಂಧ: ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
- ಕಾಳಜಿ ಕೇಂದ್ರಗಳು: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ತಕ್ಷಣವೇ ಕಾಳಜಿ ಕೇಂದ್ರಗಳನ್ನು (Relief Centres) ತೆರೆದು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳಬೇಕು.
- ದೂರವಾಣಿ: 0824-2220588
- ಫ್ಯಾಕ್ಸ್: 0824-2441564
- ಇಮೇಲ್: dc.mnglr@gmail.com
- ಅಧಿಕೃತ ವೆಬ್‌ಸೈಟ್: www.dk.nic.in
ತುರ್ತು ಸಹಾಯಕ್ಕಾಗಿ: ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ತಕ್ಷಣವೇ ಜಿಲ್ಲಾ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು.
ಸಂಪರ್ಕ ಮಾಹಿತಿ: