BREAKING NEWS: ದ. ಕ ಜಿಲ್ಲೆಯಲ್ಲಿ ಮಳೆ ಅಬ್ಬರ; ಜು.24 ರಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಪಿಯುಕಾಲೇಜುಗಳಿಗೆ ನಾಳೆ (ಜುಲೈ 24) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.
ಪ್ರಕಟಣೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ
ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
1. ಜಿಲ್ಲೆಯಲ್ಲಿ ಈ ಕೆಳಗಿನ ಎಲ್ಲಾ ಸಂಸ್ಥೆಗಳಿಗೆ ದಿನಾಂಕ 24.07.2026 ರಂದು ರಜೆಯನ್ನು ಘೋಷಿಸಲಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಜಿಲ್ಲೆಯ ಎಲ್ಲಾ ಅಂಗನವಾಡಿಗಳು
ಜಿಲ್ಲೆಯ ಎಲ್ಲಾ ಸರ್ಕಾರಿ,ಅನುದಾನಿತ ಹಾಗು ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ)
ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳು -12ನೇ ತರಗತಿಯವರಿಗೆ (ಎಲ್ಲಾ ವನತಿ ಕಾಲೇಜುಗಳೂ ಸೇರಿದಂತೆ)
ಜಿಲ್ಲೆಯ ಎಲ್ಲಾ ITI ಮತ್ತು Diploma ಕಾಲೇಜುಗಳು (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ)
2. ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.
+ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
Toll Free No: 1077
0824-2442590