ನೀಟ್ ವಿವಾದದ ಬೆನ್ನಲ್ಲೇ ಶಿಕ್ಷಣ ಇಲಾಖೆಯಲ್ಲಿ ಮೇಜರ್ ಸರ್ಜರಿ: ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವಜಾ NEET-UG
ಶಿಕ್ಷಣ ಇಲಾಖೆಯ ಉನ್ನತ ಮಟ್ಟದ ಬದಲಾವಣೆಗಳು
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಿಂದಾಗಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಆ ಹುದ್ದೆಯಿಂದ ಮುಕ್ತಗೊಳಿಸಿ ಪಂಚಾಯತ್ ರಾಜ್ ಸಚಿವಾಲಯಕ್ಕೆ ವರ್ಗಾಯಿಸಿದೆ. ಅವರ ಜಾಗಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ಹೊಸ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಗಂಗ್ವಾರ್ ಅವರು 1994 ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಪಶುಸಂಗೋಪನಾ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇದರೊಂದಿಗೆ, ಶಿಕ್ಷಣ ಸಚಿವಾಲಯದಲ್ಲಿ ಆಡಳಿತವನ್ನು ಹಳಿಗೆ ತರಲು ಮತ್ತೊಬ್ಬ ಪ್ರಮುಖ ಅಧಿಕಾರಿಯನ್ನು ನೇಮಿಸಲಾಗಿದೆ. 1995 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಟಿ.ಕೆ. ಅನಿಲ್ ಕುಮಾರ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅನಿಲ್ ಕುಮಾರ್ ಅವರು ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದರು.
ವಿನೀತ್ ಜೋಶಿ ಹಿನ್ನೆಲೆ
ವರ್ಗಾವಣೆಗೊಂಡಿರುವ ವಿನೀತ್ ಜೋಶಿ ಅವರು ಈ ಹಿಂದೆ ಶಾಲಾ ಶಿಕ್ಷಣ ಕಾರ್ಯದರ್ಶಿಯಾಗಿ, ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ಹಂಗಾಮಿ ಅಧ್ಯಕ್ಷರಾಗಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಮಹಾನಿರ್ದೇಶಕರಾಗಿ ಹಾಗೂ CBSE ಅಧ್ಯಕ್ಷರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಹೊರಡಿಸಿದ ಆದೇಶದ ಪ್ರಕಾರ, ಜೋಶಿ ಅವರು ಈ ತಿಂಗಳ ಕೊನೆಯಲ್ಲಿ ನಿವೃತ್ತರಾಗಲಿರುವ ಪಂಚಾಯತ್ ರಾಜ್ ಕಾರ್ಯದರ್ಶಿ ವಿವೇಕ್ ಭಾರದ್ವಾಜ್ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ.